1ಇದಾದ ಮೇಲೆ ಯೇಸುವು ಇನ್ನೂ
ಎಪ್ಪತ್ತೆರಡು ಮಂದಿಯನ್ನು ನೇಮಿಸಿ, ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ
ಮುಂದಾಗಿ ಕಳುಹಿಸಿದರು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ,
“ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ
ಬೆಳೆಯ ಯಜಮಾನರನ್ನು ಬೇಡಿಕೊಳ್ಳಿರಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು
ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. 4ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ,
ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.
5ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು
ಆಶೀರ್ವಾದ ಮಾಡಿ. 6ಶಾಂತಿಪ್ರಿಯನು ಅಲ್ಲಿದ್ದರೆ
ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ ಅದು ನಿಮಗೆ ಹಿಂದಿರುಗುವುದು. 7ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು
ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
8
”ನೀವು
ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. 9ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯವು ನಿಮ್ಮನ್ನು
ಸಮೀಪಿಸಿದೆ,’ ಎಂದು ತಿಳಿಸಿರಿ. 10ಆದರೆ ನೀವು ಹೋಗುವ ಊರಿನ ಜನರು
ನಿಮ್ಮನ್ನು ಸ್ವಾಗತಿಸಿದೆ ಹೋದರೆ, ರಸ್ತೆಗಳಿಗೆ ಹೋಗಿ, 11 ’ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ
ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು
ಗಮನದಲ್ಲಿಡಿ,’ ಎಂದು ತಿಳಿಸಿರಿ. 12ತೀರ್ಪಿನ ದಿನ ಈ ಊರಿನ ಗತಿ
ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.
ಅವಿಶ್ವಾಸಿಗಳ ಅಧೋಗತಿ
(ಮತ್ತಾಯ ೧೧:೨೦-೨೪)
13
“ಕೊರಾಜ್ಜಿನ್
ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತ
ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು
ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. 14ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.
15ಎಲೈ ಕಫೆರ್ನವುಮ್ ಪಟ್ಟಣವೇ,
ನೀನು ಸ್ವರ್ಗಕ್ಕೇರುವೆ ಎಂದು ನೆನೆಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ,” ಎಂದರು ಯೇಸುಸ್ವಾಮಿ.
16ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ,
“ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯ ಮಾಡುವವನು ನನ್ನನ್ನೇ ಅಲಕ್ಷ್ಯ
ಮಾಡುತ್ತಾನೆ; ನನ್ನನ್ನು ಅಲಕ್ಷ್ಯ ಮಾಡುವವನಂತೂ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯ ಮಾಡುತ್ತಾನೆ,”
ಎಂದರು.
ಎಪ್ಪತ್ತೆರಡು ಮಂದಿ ನಿಯೋಗದ ವರದಿ
17ಕಳುಹಿಸಲಾಗಿದ್ದ ಎಪ್ಪತ್ತೆರಡು
ಮಂದಿ ಸಂತೋ಼ಭರಿತರಾಗಿ ಹಿಂತಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು
ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿ ಮಾಡಿದರು. 18ಅದಕ್ಕೆ
ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು. 19ಇದೋ, ಸರ್ಪಗಳನ್ನೂ, ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು
ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು. 20ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ
ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿರಿ,” ಎಂದು ಹೇಳಿದರು.
ಯೇಸುವಿನ ಸಂತಸ
(ಮತ್ತಾಯ ೧೧:೨೫-೨೭;
ಮಾರ್ಕ ೧೩:೧೬-೧೭)
21ಅದೇ ಗಳಿಗೆಯಲ್ಲಿ ಯೇಸುಸ್ವಾಮಿ
ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ
ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂತವರಿಗೆ ನೀವು ಶ್ರುತಿಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.
ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. 22ನನ್ನ ಪಿತ ಸಮಸ್ತವನ್ನೂ ನನ್ನ
ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು
ಮತ್ತು ಯಾರಿಗೆ ಪುತ್ರನು ಶ್ರುತಪಡಿಸಲು ಇಚ್ಚಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು
ಹೇಳಿದರು. 23ಅನಂತರ ಯೇಸು ಶಿಷ್ಯರ ಕಡೆ ತಿರುಗಿ,
ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. 24ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ,
ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ
ಹೇಳುತ್ತೇನೆ,” ಎಂದರು.
ಸದಯ ಸಮಾರಿತನ ಸಾಮತಿ
25ಒಬ್ಬ ಶಾಸ್ತ್ರಜ್ಞನು ಎದ್ದು
ಯೇಸುವನ್ನು ಪರೀಕ್ಷಿಸುವ ಉದ್ದೇಶದಿಂದ, “ಬೋಧಕರೇ, ಅಮರ ಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನು
ಮಾಡಬೇಕಾದುದು ಏನು?” ಎಂದು ಕೇಳಿದನು. 26ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ
ಏನು ಬರೆದಿದೆ? ಹೇಗೆ ಪಠಿಸುತ್ತೀಯ?” ಎಂದು ಮರುಪ್ರಶ್ನೆ ಹಾಕಿದರು. 27ಅವನು, ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ
ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು
ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು
ಉತ್ತರ ಕೊಟ್ಟನು. 28ಯೇಸು, “ಸರಿಯಾಗಿ ಉತ್ತರ ಕೊಟ್ಟೆ,
ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.
29ಆದರೆ ಆ ಶಾಸ್ತ್ರಜ್ಞನು ತನ್ನನ್ನು
ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಪ್ರಶ್ನಿಸಿದನು. 30ಆಗ ಯೇಸು, “ ಅವನಿಗೆ ಹೀಗೆಂದು ವಿವರಿಸಿದರು:
“ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ
ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆ ಮಾಡಿ, ಹೊಡೆದು
ಬಡಿದು ಅರೆಜೀವ ಮಾಡಿ ಅಲ್ಲೇ ಬಿಟ್ಟು ಹೋದರು. 31ಅದೇ ಮಾರ್ಗವಾಗಿ ಒಬ್ಬ ಯಾಜಕನು
ಹಾದು ಹೋಗಬೇಕಾಗಿ ಬಂದಿತು. ಅವನು ಈತನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. 32ಅನಂತರ ಒಬ್ಬ ಲೇವಿ*ಯು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು
ಹೋದ. 33ಅನಂತರ ಆ ಮಾರ್ಗವಾಗಿ ಪ್ರಯಾಣ
ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಇವನನ್ನು ಕಂಡು ಕನಿಕರ ಪಟ್ಟನು. 34ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ
ಅವುಗಳಿಗೆ ಬಟ್ಟೆ ಕಟ್ಟಿದ ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು
ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. 35ಮಾರನೆಯ ದಿನ ಎರಡು ದಿನಾರಿ
ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೋ, ಇದಕ್ಕಿಂತ ಹೆಚ್ಚು ವೆಚ್ಚವಾದರೆ
ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
36”ದರೋಡೆಗಾರರ ಕೈಗೆ ಸಿಕ್ಕಿದವನಿಗೆ
ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.
37ಅದಕ್ಕೆ ಅವನು, “ದಯೆ ತೋರಿದವನೇ
ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
ಸೇವಾಸಕ್ತ ಮಾರ್ತಳು-ಧ್ಯಾನಾಸಕ್ತ
ಮರಿಯಳು
38ಯೇಸುವು ತಮ್ಮ ಶಿಷ್ಯರೊಡನೆ
ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತನ್ನ ಮನೆಗೆ ಆಮಂತ್ರಿಸಿದಳು.
39ಆಕೆಗೆ ಮರಿಯಳೆಂಬ ಸೋದರಿ ಇದ್ದಳು.
ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡುಅವರ ಬೋಧನೆಯನ್ನು ಆಲಿಸುತ್ತಿದ್ದಳು. 40ಆದರೆ ಮಾರ್ತಳು ಅತಿಥಿ ಸತ್ಕಾರದ ಗಡಿಬಿಡಿಯಲ್ಲಿದ್ದಳು. ಅವಳು ಬಂದು “ಪ್ರಭೂ,
ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೆ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ
ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು. 41ಯೇಸು ಆಕೆಗೆ ಪ್ರತ್ಯುತ್ತರವಾಗಿ,
“ಮಾರ್ತಾ, ಮಾರ್ತಾ, ನೀನು ಅನಾವಶ್ಯಕ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ.
ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು, “ ಎಂದರು.
*ಧಾರ್ಮಿಕ
ವಿಧಿಗಳನ್ನು ನೆರವೇರಿಸುವುದರಲ್ಲಿ ಯಾಜಕನಿಗೆ ಸಹಾಯಕ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ