ಅಧ್ಯಾಯ 15


ಕಾಣದೆ ಹೋದ ಕುರಿ
(ಮತ್ತಾಯ ೧೮:೧೨-೧೪)

1ಯೇಸುವಿನ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ, ಪಾಪಿಗಳೂ ಬರುತ್ತಿದ್ದರು. 2ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟ ಮಾಡುತ್ತಾನೆ, ಎಂದು ಗೊಣಗಿದರು. 3 ಸಂದರ್ಭದಲ್ಲಿ ಯೇಸು ಸಾಮತಿಯನ್ನು ಹೇಳಿದರು: 4“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆ ಹೋದ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? 5ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; 6ಸ್ನೇಹಿತರನ್ನೂ, ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದು ಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ, ಎನ್ನುತ್ತಾನೆ ಅಲ್ಲವೆ?

7ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷವುಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ”.

ಕಳೆದುಹೋದ ನಾಣ್ಯ

8 “ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕುತ್ತಾಳೆ ಅಲ್ಲವೇ? 9ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ, ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ, ಎನ್ನುತ್ತಾಳಲ್ಲವೆ? 10ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷವುಂಟಾಗುತ್ತದೆಂಬುದು ನಿಶ್ಚಯ, ಎಂದರು.

ದುಂದುಗಾರ ಮಗ
(ಮತ್ತಾಯ ೧೮:೧೨-೧೪)

11ಯೇಸು ಮುಂದುವರಿಸುತ್ತಾ, ಸಾಮತಿಯನ್ನೂ ಹೇಳಿದರು, “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. 12ಅವರಲ್ಲಿ ಕಿರಿಯವನು, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು, ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ. 13ಕೆಲವು ದಿನಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆ ಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ. 14ಹೀಗೆ ಅವನು ಎಲ್ಲವನ್ನೂ ಹಾಳುಮಾಡಿಕೊಂಡ ಮೇಲೆ ದೇಶಾದ್ಯಂತ ಘೋರವಾದ ಕ್ಷಾಮವು ತಲೆದೋರಿತು. 15ನಿರ್ಗತಿಕನಾದ ಅವನು ಹೋಗಿ, ಧೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತನು ಅವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ. 16ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ. 17ಆಗ ಅವನಿಗೆ ಬುದ್ಧಿ ಬಂತುನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ಆದರೆ ನಾನಿಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. ನಾನು ಈಗಲೇ ಹೊರಟು, ತಂದೆಯ ಬಳಿಗೆ ಹೋಗಿ, 18 ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ; 19ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ, ಎಂದುಕೊಂಡ. ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. ಮಗನು ಇನ್ನೂ ಅಷ್ಟು ದೂರದಲ್ಲಿರುವಾಗಲೇ ತಂದೆ ನೋಡಿದ. 20ಆತನ ಹೃದಯ ಕನಿಕರದಿಂದ ಕರಗಿ ಹೋಯಿತು. ಓಡಿಹೋಗಿ ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ. 21ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ, ಎಂದ. 22ಆದರೆ ತಂದೆಯು ಆಳುಗಳನ್ನು ಕರೆದು, ‘ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ, ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ; 23ಕೊಬ್ಬಿಸಿದ ಕರುವನ್ನು ತಂದು ಕೊಯ್ಯಿರಿ; ಹಬ್ಬ ಮಾಡೋಣ, ಆನಂದಿಸೋಣ. 24ಏಕೆಂದರೆ, ನನ್ನ ಮಗನು ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದಈಗ ಸಿಕ್ಕಿದ್ದಾನೆ, ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.

25ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂತಿರುಗಿ ಮನೆಯನ್ನು ಸಮೀಪಿಸುವಾಗ ಗಾನನರ್ತನಗಳ ಸದ್ದು ಅವನ ಕಿವಿಗೆ ಬಿತ್ತು. 26‘ಮನೆಯಲ್ಲೇನು ವಿಶೇಷ? ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. 27 ‘ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಕರುವನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ, ಎಂದು ಆಳು ತಿಳಿಸಿದ.


28ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ 29ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆ ಮಾಡುತ್ತಿದ್ದೇನೆ; ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬ ಮಾಡಲು ಒಂದು ಆಡುಮರಿಯನ್ನೂ ಕೂಡ ನೀವು ಕೊಟ್ಟಿಲ್ಲ. 30ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಕರುವನ್ನು ಕೊಯ್ಯಿಸಿದಿರಿ! ಎಂದು ವಾದಿಸಿದ. 31ಆಗ ತಂದೆಯು ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೆ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ. 32 ನಿನ್ನ ತಮ್ಮನು ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬ ಮಾಡಿ ಆನಂದಿಸುವುದು ಸಹಜವಲ್ಲವೆ? ಎಂದನು”.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ