ಅಧ್ಯಾಯ 21



ಬಡ ವಿಧವೆಯ ಬಿಡಿಗಾಸು
(ಮಾರ್ಕ ೧೨:೪೧-೪೪)

1ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸು ಗಮನಿಸಿದರು. 2ಅಷ್ಟರಲ್ಲಿ ಒಬ್ಬ ಬಡವಿಧವೆಯು ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. 3ಅದನ್ನು ಕಂಡ ಯೇಸು, "ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. 4ಅವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಆದರೆ ಈಕೆಯು ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು," ಎಂದರು.
                                                                       
ಕಲ್ಲಿನ ಮೇಲೆ ಕಲ್ಲು ಉಳಿಯದು

5"ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!" ಎಂದು ಕೆಲವರು ಮಾತನಾಡುತ್ತಿದ್ದರು. 6ಆಗ ಯೇಸು, "ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿ ಹಾಕುವ ಕಾಲವೊಂದು ಬರುವುದು," ಎಂದರು.
                                               
ಸಂರಕ್ಷಣೆಗೆ ಮುಂಚೆ ಸಂಕಷ್ಟಗಳು
(ಮತ್ತಾಯ ೨೪:೩-೧೪; ಮಾರ್ಕ ೧೩:೩-೧೩)

7"ಗುರುವೆ ಇದು ಸಂಭವಿಸುವುದು ಯಾವಾಗ? ಇದೀಗ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?" ಎಂದು ಕೆಲವರು ಕೇಳಿದರು. 8ಅದಕ್ಕೆ ಯೇಸು, "ನೀವು ಮೋಸಹೋಗದಂತೆ ಜಾಗರೂಕರಾಗಿರಿ. ಅನೇಕರು, 'ನಾನೇ ಆತ, ನಾನೇ ಆತ,' ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, 'ಕಾಲವು ಸಮೀಪಿಸಿಬಿಟ್ಟಿತು,' ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ. 9ಸಮರ ಸಂಕಲಹಗಳ ಸುದ್ಧಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ," ಎಂದರು.
10ಅದೂ ಅಲ್ಲದೆ ಯೇಸು ಇಂತೆಂದರು: "ಜನಾಂಗಕ್ಕೆ ವಿರುದ್ಧವಾಗಿ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರವೂ ಯುದ್ದಕ್ಕಿಳಿಯುವುವು; 11ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು; ಭಯಂಕರ ಘಟನೆಗಳೂ ಭಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು. 12ಇವೆಲ್ಲವೂ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ನಿಮ್ಮನ್ನು ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. 13ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದಾವಕಾಶವಾಗಿರುತ್ತದೆ. 14ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. 15ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂತಹ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು. 16ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ ನಿಮ್ಮನ್ನು ಪರಾಧೀನಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. 17ನೀವು ನನ್ನವರಾದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು. 18ಆದರೂ ನಿಮ್ಮ ತಲೆಗೂದಲೊಂದೂ ನಾಶವಾಗುವುದಿಲ್ಲ. 19ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ".
                                                                                                                                                                                                                                                                                               
ಜೆರುಸಲೇಮಿನ ವಿನಾಶ
(ಮತ್ತಾಯ ೨೪:೧೫-೨೧; ಮಾರ್ಕ ೧೩:೧೪-೧೯)

20"ಜೆರುಸಲೇಂ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. 21ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ. 22ಏಕೆಂದರೆ, ದಂಡನೆಯ ಕಾಲವದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು. 23ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಿಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು. 24ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದು ಸದೆಬಡಿಯುವರು"

ನರಪುತ್ರನ ಪುನರಾಗಮನ
(ಮತ್ತಾಯ ೨೪:೨೯-೩೧; ಮಾರ್ಕ ೧೩:೨೪-೨೭)

25"ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗೆರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕು ತೋಚದೆ ತತ್ತರಿಸಿ ಹೋಗುವುವು. 26ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. 27ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. 28ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು."
29ಬಳಿಕ ಯೇಸು ಈ ಸಾಮತಿಯನ್ನು ಹೇಳಿದರು; "ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. 30ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲವು ಆರಂಭವಾಯಿತೆಂದು ನೀವು ಅರಿತುಕೊಳ್ಳುವಿರಿ. 31ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. 32ಇವೆಲ್ಲಾ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ."

ಮುಂಜಾಗರೂಕತೆ

34"ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಳಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ. 35ಜಗತ್ತಿನ ಎಲ್ಲಾ ನಿವಾಸಿಗಳು ಅದಕ್ಕೆ ಸಿದ್ಧರಾಗಿರಬೇಕು. 36ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನರಂತರ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ,"ಎಂದರು.
37ಯೇಸುವು ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್‌ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು. ಅವರ ಬೋಧನೆಯನ್ನು ಕೇಳಲು ಜನರೆಲ್ಲರೂ ಸೂರ್ಯೋದಯಕ್ಕೆ ಮುಂಚೆಯೇ ಎದ್ದು ದೇವಾಲಯಕ್ಕೆ ಬರುತ್ತಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ