ಅಧ್ಯಾಯ 5


ಮನುಷ್ಯರನ್ನು ಹಿಡಿಯುವ ಬೆಸ್ತರು
(ಮತ್ತಾಯ ೪:೧೮-೨೨; ಮಾರ್ಕ ೧:೧೬-೨೦)

1ಒಮ್ಮೆ ಯೇಸುವು ಗೆನಸರೇತ್‌ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. 2ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದುವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. 3ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.
4ಬೋಧನೆ ಮುಗಿದದ್ದೇ ಸಿಮೋನನಿಗೆ,ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನು ಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು. 5ಅದಕ್ಕೆ ಸಿಮೋನನು,ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು. 6ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದುವು. 7ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ  ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲಾರಂಭಿಸಿದವು. 8ಇದನ್ನು ಕಂಡ ಸಿಮೋನ್‌ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, "“ಸ್ವಾಮಿ ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು. 9ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. 10ಸಿಮೋನನ ಪಾಲುದಾರರಾದ ಜೆಬೆದಾಯನ ಮಕ್ಕಳು-ಯಕೋಬ ಮತ್ತು ಯೊವಾನ್ನರು ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನಾಗುವೆ,” ಎಂದರು. 11ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ, ಎಲ್ಲವನ್ನೂ ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಕುಷ್ಟರೋಗಿಯ ಮೇಲೆ ಕನಿಕರ
(ಮತ್ತಾಯ ೮:೧-೪; ಮಾರ್ಕ ೧:೪೦-೪೫)

12ಯೇಸುವು ಒಂದು ಪಟ್ಟಣದಲ್ಲಿದ್ದಾಗ ಮೈಯೆಲ್ಲಾ ಕುಷ್ಟ ಹಿಡಿದಿದ್ದ ರೋಗಿಯೊಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮಿ, ತಾವು ಮನಸ್ಸು ಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು. 13ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಟವು ಮಾಯವಾಗಿ ಅವನು ಗುಣಹೊಂದಿದನು. 14ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆಯು ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಲಿ,” ಎಂದರು.
          15ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. 16ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.

ಪಾಪವಿಮೋಚಕ ಯೇಸು
(ಮತ್ತಾಯ ೯:೧-೮; ಮಾರ್ಕ ೨:೧-೧೨)


17ಒಮ್ಮೆ ಯೇಸುವು ಬೋಧನೆ ಮಾಡುತ್ತಿದ್ದಾಗ, ಫರಿಸಾಯರೂ ಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತದ ವಿವಿಧ ಊರುಗಳಿಂದಲೂ ಜೆರುಸಲೇಂ ಪಟ್ಟಣದಿಂದಲೂ ಬಂದಿದ್ದರು. 18ಆಗ ಕೆಲವರು ಒಬ್ಬ  ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು. 19ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
20ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. 21ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಮಾಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲಾರಂಭಿಸಿದರು. 22ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಿರುವುದೇನು? 23 ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲುಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲುಭವೋ? 24ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯತ್ತ ನೋಡಿ, “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,” ಎಂದರು. 25ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನೆದ್ದು, ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊದನು. 26ಎಲ್ಲರೂ ನಿಬ್ಬೆರಗಾಗಿ, ‘ನಾವು ಈದಿನ ಎಂಥ ಅಪೂರ್ವಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

ಸುಂಕದ ಇಲಾಖೆಯಿಂದ ಶಿಷ್ಯನ ಆಯ್ಕೆ
(ಮತ್ತಾಯ ೯:೯-೧೩; ಮಾರ್ಕ ೨:೧೩-೧೭)

27ಅನಂತರ ಯೇಸುವು ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. 28ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು.
29ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು. 30ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಟರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು. 31ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; 32ನಾನು ಬಂದಿರುವುದು ಧರ್ಮಿಷ್ಟರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಟರನ್ನು ಕರೆಯುವುದಕ್ಕೆ,” ಎಂದರು.

ವಿವಾಹದಲ್ಲಿ ಉಪವಾಸವೇ?
(ಮತ್ತಾಯ ೯:೧೪-೧೭; ಮಾರ್ಕ ೨:೧೮-೨೨)

33ಯೊವಾನ್ನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು. 34ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? 35ಮದವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು, ಆ ದಿನಗಳು ಬಂದಾಗ ಅವರು ಉಪವಾಸ ಮಾಡುವರು,” ಎಂದು ಉತ್ತರಕೊಟ್ಟರು.

36ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ. 37ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುವಂತೆ ಮಾಡುತ್ತದೆ; ಮದ್ಯವು ಚೆಲ್ಲಿ ಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. 38ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು. 39ಹಳೇ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಟವೆನ್ನುತ್ತಾನೆ,” ಎಂದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ